
ಬೆಂಗಳೂರು: ಕರ್ನಾಟಕ ರಾಜ್ಯದ ಕೆ.ಎಫ್.ಸಿ.ಎಸ್.ಸಿ. ಗೋದಾಮುಗಳು ಹಾಗೂ ಅನ್ನಭಾಗ್ಯ ಯೋಜನೆಯಲ್ಲಿ ದುಡಿಯುತ್ತಿರುವ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕಾರ್ಮಿಕರ ಬೃಹತ್ ಸಮ್ಮೇಳನವು 2025ರ ಫೆಬ್ರವರಿ 28ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಸಂತನಗರದ ಡಾ. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ಈ ಸಮ್ಮೇಳನದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಹಾಗೂ ಇಲಾಖೆಯ ಅಧ್ಯಕ್ಷರು ಮತ್ತು ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ರಾಜ್ಯದ 223 ಗೋದಾಮುಗಳಲ್ಲಿ ಕೆಲಸ ಮಾಡುತ್ತಿರುವ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕಾರ್ಮಿಕರು ಹಾಗೂ ಅನ್ನಭಾಗ್ಯ ಯೋಜನೆಯಲ್ಲಿ ದುಡಿಯುತ್ತಿರುವ 1200 ಪ್ರತಿನಿಧಿಗಳು ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕುಗಳಿಂದ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.
1973ರಿಂದ ದುಡಿಯುತ್ತಿರುವ ಈ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆಯ ಪ್ರಕಾರ ನೀಡಬೇಕಾದ ಇ.ಎಸ್.ಐ. ಮತ್ತು ಪಿ.ಎಫ್. ಅನ್ನು 2015ರ ಜನವರಿ 5ರಂದು ಕಡ್ಡಾಯವಾಗಿ ನೀಡಲು ಆದೇಶಿಸಲಾಗಿದ್ದರೂ, ರಾಜ್ಯದ ಉಪನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಸಾರಿಗೆ ಗುತ್ತಿಗೆದಾರರು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ಇದರ ಜೊತೆಗೆ, ಗೋದಾಮುಗಳಲ್ಲಿ ಕೆಲಸ ಮಾಡುವ ಹಮಾಲಿಗಳ ಹೆಸರು, ಹಾಜರಾತಿ ಪುಸ್ತಕ, ಗುತ್ತಿಗೆದಾರರು ಪಾವತಿಸಿದ ಕೂಲಿ ಮೊತ್ತ, ಇ.ಎಸ್.ಐ. ಮತ್ತು ಪಿ.ಎಫ್.ಗೆ ಪಾವತಿಸಿದ ಮೊತ್ತ, ಪಾವತಿಸಿದ ದಿನಾಂಕ, ಖಾತೆ ಸಂಖ್ಯೆ ಹಾಗೂ ಹಮಾಲಿಗಳ ಸಹಿಗಳನ್ನು ಹೊಂದಿರಬೇಕು ಎಂದು 2016ರ ಜನವರಿ 21ರಂದು ಆದೇಶಿಸಲಾಗಿದ್ದರೂ, ಗೋದಾಮು ವ್ಯವಸ್ಥಾಪಕರು, ಜಿಲ್ಲಾ ವ್ಯವಸ್ಥಾಪಕರು ಹಾಗೂ ಜಿಲ್ಲಾ ಉಪನಿರ್ದೇಶಕರು ಅನುಷ್ಠಾನ ಮಾಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಜಿ.ಆರ್. ಶಿವಶಂಕರ್, ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕಾರ್ಮಿಕರಿಗೆ ವಸತಿ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈ ಸಮ್ಮೇಳನದಲ್ಲಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಸಂಘಟಕರು ತಿಳಿಸಿದರು.
City Today News 9341997936
