ಕೃಷಿ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಬೃಹತ್ ಪ್ರತಿಭಟನೆ ಎಚ್ಚರಿಕೆ

ಬೆಂಗಳೂರು, ಆ. 1: ಕೃಷಿ ಇಲಾಖೆಯ ತಾಂತ್ರಿಕ ಹುದ್ದೆಗಳ ನೇಮಕಾತಿಯಲ್ಲಿ ಆಗುತ್ತಿದೆ ಎನ್ನಲಾದ ಅನ್ಯಾಯ, ಕೃಷಿ ಶಿಕ್ಷಣದ ಗುಣಮಟ್ಟದ ಮೇಲಿನ ಆತಂಕ ಹಾಗೂ ICAR ಮಾನ್ಯತೆ ಪಡೆದ ಕೃಷಿ ಪದವೀಧರರ ಭವಿಷ್ಯವನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯದ ವಿವಿಧ ಕೃಷಿ ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿಗಳು ಕಳೆದ 17 ದಿನಗಳಿಂದ ಶಾಂತಿಯುತ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಈ ಕುರಿತು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ವೇದಿಕೆಯ ಪ್ರತಿನಿಧಿಗಳು, ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಅಥವಾ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿ ಎಂದು ತಿಳಿಸಿದರು.

ಸರ್ಕಾರವು ತಮ್ಮ ನ್ಯಾಯಯುತ ಬೇಡಿಕೆಗಳನ್ನು ತಕ್ಷಣ ಈಡೇರಿಸದಿದ್ದಲ್ಲಿ ರಾಜ್ಯದ ಸಾವಿರಾರು ಕೃಷಿ ವಿದ್ಯಾರ್ಥಿಗಳು ಹಾಗೂ ಕೃಷಿ ಪದವೀಧರರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳಲ್ಲಿ, ಕೃಷಿ ಇಲಾಖೆಯ ತಾಂತ್ರಿಕ ಹುದ್ದೆಗಳ ನೇಮಕಾತಿಯಲ್ಲಿ AICTE ಮಾನ್ಯತೆಯನ್ನು ಕೈಬಿಟ್ಟು, ಸೇವಾ ಮತ್ತು ನೇಮಕಾತಿ (C&R) ನಿಯಮಗಳಿಗೆ ತಿದ್ದುಪಡಿ ಮಾಡಿ ಹೊಸದಾಗಿ ಅಧಿಸೂಚನೆ ಹೊರಡಿಸಬೇಕು. ಅಲ್ಲದೆ, ಈ ಹುದ್ದೆಗಳಿಗೆ ICAR ಮಾನ್ಯತೆ ಪಡೆದ ಕೃಷಿ ಪದವೀಧರರಿಗೆ ಮಾತ್ರ ಅರ್ಹತೆ ನೀಡಬೇಕು ಎಂದು ಒತ್ತಾಯಿಸಿದರು.

ಇದರ ಜೊತೆಗೆ, ICAR ಮಾನ್ಯತೆ ಇಲ್ಲದ ಖಾಸಗಿ ಕೃಷಿ ಕಾಲೇಜುಗಳಿಗೆ ಹೊಸದಾಗಿ ಅಥವಾ ಮುಂದುವರಿದ ಸಂಯೋಜನೆ (Affiliation) ನೀಡುವುದನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.
DAESI ಯೋಜನೆಯಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮಗಳು, ಅಸಮಾನತೆಗಳು ಹಾಗೂ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಅವರು ಒತ್ತಾಯಿಸಿದರು. ಕೃಷಿ ಇಲಾಖೆಯ AO, AAO ಸೇರಿದಂತೆ ಎಲ್ಲಾ ತಾಂತ್ರಿಕ ಹುದ್ದೆಗಳ ನೇಮಕಾತಿಯನ್ನು ಪ್ರತಿವರ್ಷ ನಿಯಮಿತವಾಗಿ ನಡೆಸುವ ವ್ಯವಸ್ಥೆ ಜಾರಿಯಾಗಬೇಕು ಎಂದೂ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಕೃಷಿ ವಿಜ್ಞಾನಿ ಡಾ. ಪ್ರಕಾಶ್ ಕಮ್ಮರಡಿ, ರೈತ ಮುಖಂಡರಾದ ಬಡಗಲ್ಪುರ ನಾಗೇಂದ್ರ ಮತ್ತು ಚುಕ್ಕಿ ನಂಜುಂಡಸ್ವಾಮಿ, ಪ್ರಾಂತ ರೈತ ಸಂಘದ ಮುಖಂಡ ಯಶವಂತ್, ರಾಜ್ಯದ ವಿವಿಧ ರೈತ, ಕಾರ್ಮಿಕ, ವಿದ್ಯಾರ್ಥಿ ಹಾಗೂ ಜನಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

City Today News 9341997936

Leave a comment

This site uses Akismet to reduce spam. Learn how your comment data is processed.