ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಅಂಗೀಕಾರಕ್ಕೆ ಆಗ್ರಹ; ಡಿ.6ರಂದು ಅಂಬೇಡ್ಕರ್ ಪರಿನಿರ್ವಾಣ ದಿನದಂದು ಆಂದೋಲನಕ್ಕೆ ಚಾಲನೆ – ರಾಜ್ಯಾದ್ಯಂತ ಭೀಮಯಾನ ರ್ಯಾಲಿ ನಡೆಸಲು ನಿರ್ಧಾರ

ಬೆಂಗಳೂರು: ಸಂಪೂರ್ಣ ಒಳಮೀಸಲಾತಿ ಜಾರಿ, ದಲಿತರ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ, ಎಸ್ಸಿಎಸ್ಪಿ/ಟಿಎಸ್ಪಿ ಅನುದಾನದ ಸಮರ್ಪಕ ಬಳಕೆ ಹಾಗೂ ಬಹುಜನ ಸಮುದಾಯದ ಹಕ್ಕುಗಳ ರಕ್ಷಣೆಗಾಗಿ ಡಿಸೆಂಬರ್ ಮೂರನೇ ವಾರದಿಂದ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲು ದಲಿತ ಸಂಘರ್ಷ ಸಮಿತಿ (ದ.ಸಂ.ಸ) ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಬಿ) ನಿರ್ಧರಿಸಿವೆ.
ನವೆಂಬರ್ 25ರಂದು ಬೆಂಗಳೂರಿನ ಅಡ್ಡರ್ಭವನದಲ್ಲಿ ಆರ್ಪಿಐ (ಬಿ) ರಾಷ್ಟ್ರೀಯ ಅಧ್ಯಕ್ಷರು ಹಾಗೂ ದ.ಸಂ.ಸ ರಾಜ್ಯಾಧ್ಯಕ್ಷರಾದ ಡಾ. ಎನ್. ಮೂರ್ತಿ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಕಾರ್ಯಕಾರಿ ದುಂಡುಮೇಜಿನ ಸಭೆಯಲ್ಲಿ ರಾಜ್ಯದ 31 ಜಿಲ್ಲೆಗಳು ಹಾಗೂ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ನೂರಾರು ಪದಾಧಿಕಾರಿಗಳು ಭಾಗವಹಿಸಿ ಹೋರಾಟದ ರೂಪುರೇಷೆ ಸಿದ್ಧಪಡಿಸಿದರು.

ಸಭೆಯಲ್ಲಿ ಮಾತನಾಡಿದ ಡಾ. ಎನ್. ಮೂರ್ತಿ ಅವರು, ಸುಪ್ರೀಂ ಕೋರ್ಟ್ನ ಏಳು ನ್ಯಾಯಮೂರ್ತಿಗಳ ಸಂವಿಧಾನ ಪೀಠದ ತೀರ್ಪಿನ ಆಶಯಕ್ಕೆ ಅನುಗುಣವಾಗಿ ಸರ್ಕಾರ ಸಂಪೂರ್ಣ ಒಳಮೀಸಲಾತಿ ಜಾರಿಗೊಳಿಸಬೇಕು. ಪ್ರಸ್ತುತ ಜಾರಿಗೊಳಿಸಿರುವ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ ಬಡ್ತಿ, ಬ್ಯಾಕ್ಲಾಗ್, ಸರ್ಕಾರಿ ನೇಮಕಾತಿಗಳು, ನಿಗಮ-ಮಂಡಳಿಗಳು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿಯೂ ಒಳಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಡಿಸೆಂಬರ್ 2ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಒಳಮೀಸಲಾತಿ ವಿಧೇಯಕವನ್ನು ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕರಿಸಬೇಕು. ಬೇಡಿಕೆ ಈಡೇರದಿದ್ದರೆ ವಿಧಾನಸೌಧದ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸಭೆ ಎಚ್ಚರಿಕೆ ನೀಡಿತು.
ಡಿಸೆಂಬರ್ 6ರಿಂದ ಆಂದೋಲನಕ್ಕೆ ಚಾಲನೆ
ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಅಂಗವಾಗಿ ಡಿಸೆಂಬರ್ 6ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಸಂಪೂರ್ಣ ಒಳಮೀಸಲಾತಿ ಜಾರಿ ಆಂದೋಲನವನ್ನು ಉದ್ಘಾಟಿಸಲು ನಿರ್ಧರಿಸಲಾಗಿದೆ. ನಂತರ ರಾಜ್ಯದ ಹಳ್ಳಿ, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಜಾಗೃತಿ ಸಭೆ, ವಿಚಾರ ಸಂಕಿರಣ ಮತ್ತು ಸಂವಾದಗಳನ್ನು ನಡೆಸಲಾಗುವುದು. ಡಿಸೆಂಬರ್ ಮೂರನೇ ವಾರದಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ‘ಭೀಮಯಾನ’ ರ್ಯಾಲಿ ಆಯೋಜಿಸಲು ಸಭೆ ಸರ್ವಾನುಮತದಿಂದ ತೀರ್ಮಾನಿಸಿತು.
ದಲಿತರ ಮೇಲಿನ ದೌರ್ಜನ್ಯ, ಅನುದಾನ ದುರ್ಬಳಕೆಗೆ ಆಕ್ರೋಶ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಲಿತರ ಮೇಲೆ ನಡೆದ ಕೊಲೆ, ಅತ್ಯಾಚಾರ, ಹಲ್ಲೆ ಹಾಗೂ ಸಾಮಾಜಿಕ ಬಹಿಷ್ಕಾರದ ಘಟನೆಗಳ ಬಗ್ಗೆ ಸಭೆ ತೀವ್ರ ಕಳವಳ ವ್ಯಕ್ತಪಡಿಸಿತು. ಸಂತ್ರಸ್ತ ಕುಟುಂಬಗಳಿಗೆ ಪರಿಹಾರ, ಸರ್ಕಾರಿ ಉದ್ಯೋಗ ಒದಗಿಸುವುದರ ಜೊತೆಗೆ ಆರೋಪಿಗಳನ್ನು ಬಂಧಿಸಿ ಗಂಭೀರ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಲಾಯಿತು.
ಎಸ್ಸಿಎಸ್ಪಿ/ಟಿಎಸ್ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳು ಸೇರಿದಂತೆ ಇತರ ಕಾಮಗಾರಿಗಳಿಗೆ ಬಳಸುತ್ತಿರುವುದನ್ನು ಮುಖಂಡರು ವಿರೋಧಿಸಿದರು. ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ, ಅಬ್ರಾಡ್ ಮತ್ತು ಪ್ರಬುದ್ಧ ಯೋಜನೆಗಳನ್ನು ಮುಂದುವರಿಸಬೇಕು. ಗಂಗಾ ಕಲ್ಯಾಣ, ಭೂ ಒಡೆತನ ಹಾಗೂ ವಸತಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಇದಲ್ಲದೆ, ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು ದಲಿತರ ಭೂಮಿಯನ್ನು ರಕ್ಷಿಸುವುದು, ಬಗರ್ ಹುಕುಂ ಅರ್ಜಿಗಳನ್ನು ವಿಲೇವಾರಿ ಮಾಡುವುದು, ನಿವೇಶನ ರಹಿತರಿಗೆ ಐದು ಲಕ್ಷ ನಿವೇಶನ ಒದಗಿಸುವುದು ಹಾಗೂ 43 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸುವಂತೆ ಸಭೆ ಒತ್ತಾಯಿಸಿತು.
ಚುನಾವಣೆಯಲ್ಲೂ ಸ್ಪರ್ಧಿಸಲು ನಿರ್ಧಾರ
2028ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಂಘಟನಾತ್ಮಕ ಸಿದ್ಧತೆ ನಡೆಸಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತು ಸಭೆ ನಿರ್ಧರಿಸಿತು. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಲಾಯಿತು. ಉಳಿದ ಅಭ್ಯರ್ಥಿಗಳ ಆಯ್ಕೆಗಾಗಿ ಕೋರ್ ಕಮಿಟಿ ರಚಿಸಲಾಯಿತು. ಒಳಮೀಸಲಾತಿ ಬೇಡಿಕೆ ಈಡೇರದಿದ್ದರೆ ಹಿರಿಯೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ರಾಜಕೀಯ ಹೋರಾಟ ನಡೆಸುವುದಾಗಿ ಮುಖಂಡರು ತಿಳಿಸಿದರು.
ಸಭೆಯಲ್ಲಿ ವಿವಿಧ ಜಿಲ್ಲೆಗಳ ಅಧ್ಯಕ್ಷರು, ವಿಭಾಗೀಯ ಪದಾಧಿಕಾರಿಗಳು, ಮಹಿಳಾ ಘಟಕದ ಪ್ರತಿನಿಧಿಗಳು ಹಾಗೂ ರಾಜ್ಯ ಸಮಿತಿ ನಿರ್ದೇಶಕರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.
ಡಿಸೆಂಬರ್ 6ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ರಾಜ್ಯ ಮತ್ತು ರಾಷ್ಟ್ರಮಟ್ಟದ ದ.ಸಂ.ಸ ಹಾಗೂ ಆರ್ಪಿಐ (ಬಿ) ಮುಖಂಡರು, ಹಿರಿಯ ಹೋರಾಟಗಾರರು ಮತ್ತು ಸಮಾನ ಮನಸ್ಕ ಸಂಘಟನೆಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಡಾ. ಎನ್. ಮೂರ್ತಿ ಮನವಿ ಮಾಡಿದ್ದಾರೆ.
City Today News 9341997936
